ಹಾಸನ, ಮಾ.14: ಅರಕಲಗೂಡು ತಾಲೂಕಿನ ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಸಂಸದ ಶ್ರೇಯಸ್ ಎಂ. ಪಟೇಲ್ ಆಲಿಸಿ, ರೈತರಿಗೆ ನ್ಯಾಯಯುತ ಬೆಲೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ರಾಮನಾಥಪುರ ತಂಬಾಕು ಮಾರುಕಟ್ಟೆಗೆ ಭೇಟಿ ನೀಡಿದ ಸಂಸದರು, ಅಲ್ಲಿನ ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ತಂಬಾಕು ಬೇಲ್ಗಳ ದರ ನಿಗದಿಯಲ್ಲಿ ತಾರತಮ್ಯ ಉಂಟಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಂಬಾಕು ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರದ ಅಬಕಾರಿ ಸುಂಕ ಹಾಗೂ ಜಿಎಸ್ಟಿ ಹೊರೆಯೂ ಒಂದು ಪ್ರಮುಖ ಕಾರಣವಾಗಿದೆ ಎಂಬುದನ್ನು ಉಲ್ಲೇಖಿಸಿ, ಈ ಕುರಿತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ತಂಬಾಕು ಬೆಳೆ ಬೆಳೆಸಿ ಮಾರುಕಟ್ಟೆಗೆ ತರುತ್ತಿರುವ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದು, ಅವರಿಗೆ ನ್ಯಾಯಯುತ ದರ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದರು.

ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲಾಗುವುದಿಲ್ಲ. ತಂಬಾಕು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ ನೀಡಿದರು.
