ಸಕಲೇಶಪುರ, ಜು. 9: ಕಳೆದ ಒಂದು ವಾರದಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ತಾಲೂಕು ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಗುರುವಾರ ಚೆಸ್ಕಾಂ (ಮೆಸ್ಕಾಂ) ಕಚೇರಿ ಎದುರು ಟೋಕನ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹುರಡಿ ವಿಶ್ವನಾಥ್, ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ವಿದ್ಯುತ್ ಇಲ್ಲದ ಕಾರಣ ಮೋಟಾರ್ಗಳನ್ನು ಚಾಲನೆ ಮಾಡಲಾಗದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಿದ್ಯುತ್ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಕರೆ ಮಾಡಿದರೂ ಕಾರ್ಯನಿರ್ವಾಹಕ ಇಂಜಿನಿಯರ್ (EE) ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ದೂರವಾಣಿ ಸ್ವೀಕರಿಸುತ್ತಿಲ್ಲ. ಕೆಲವೊಮ್ಮೆ ಕರೆ ಸ್ವೀಕರಿಸಿದರೂ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ನೀಡದೆ ಹೊರಗಿನ ಗುತ್ತಿಗೆದಾರರಿಗೆ ಆದ್ಯತೆ ನೀಡುತ್ತಿರುವ ಪರಿಣಾಮ ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ವಿದ್ಯುತ್ ಕಂಬಗಳ ದುರಸ್ತಿ ವಿಳಂಬವಾಗುತ್ತಿದ್ದು, ವಿದ್ಯುತ್ ಪೂರೈಕೆ ಪುನಃಸ್ಥಾಪನೆಯೂ ತಡವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮೆಸ್ಕಾಂ ಇಲಾಖೆಯಲ್ಲಿ ಭ್ರಷ್ಟಾಚಾರ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆಯ ಕೊರತೆಯಿಂದ ತಾಲೂಕಿನ ವಿದ್ಯುತ್ ಪೂರೈಕೆ ವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಮುಖಂಡರು, “ಇದು ಕೇವಲ ಟೋಕನ್ ಪ್ರತಿಭಟನೆ. ಅಧಿಕಾರಿಗಳಿಗೆ ಎಂಟು ದಿನಗಳ ಗಡುವು ನೀಡಿದ್ದೇವೆ. ಈ ಅವಧಿಯಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಸಾವಿರಾರು ಜನರನ್ನು ಸೇರಿಸಿ ಇದೇ ಸ್ಥಳದಲ್ಲಿ ಬೃಹತ್ ಸತ್ಯಾಗ್ರಹ ನಡೆಸಲಾಗುವುದು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಅಮಾನತು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಈ ಕುರಿತು ಇಂಧನ ಸಚಿವರಿಗೆ ಪತ್ರ ಬರೆದು, ಶೀಘ್ರದಲ್ಲೇ ಭೇಟಿ ಮಾಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಪ್ರೇಮ್ನಾಥ್, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ್, ತಾಲೂಕು ಉಪಾಧ್ಯಕ್ಷ ಸೋಮ್ಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
