ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನವೆಂಬರ್ 28ರಂದು ಬೆಳಿಗ್ಗೆ 10.30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ ನಡೆಯಲಿದೆ ಎಂದು ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ತಿಳಿಸಿದರು.
ಘಟಿಕೋತ್ಸವದಲ್ಲಿ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಶುಭಾ ವೆಂಕಟೇಶ ಅಯ್ಯಂಗಾರ್, ಹಿರಿಯ ಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ತಮಿಳುನಾಡಿನ ಪ್ರಸಿದ್ಧ ವೈದ್ಯ ಡಾ. ಸಿ. ಪಳನಿವೇಲು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.
ಇಸ್ರೋ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಡಾ. ವಿ. ನಾರಾಯಣನ್ ಘಟಿಕೋತ್ಸವ ಭಾಷಣ ಮಾಡಲಿದ್ದು, ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಜಿ. ಪರಮೇಶ್ವರ ಅಧ್ಯಕ್ಷತೆ ವಹಿಸಿ ಪದವಿ ಪ್ರಮಾಣ ವಚನ ಬೋಧಿಸಿ ಪ್ರಮಾಣಪತ್ರ ವಿತರಿಸಲಿದ್ದಾರೆ.
ಈ ಬಾರಿ 18 ಮಂದಿಗೆ ಡಾಕ್ಟರೇಟ್, ಒಬ್ಬರಿಗೆ ಡಾ. ಎಂ.ಕೆ. ವೀರಯ್ಯ ಪ್ರಶಸ್ತಿ ಸೇರಿದಂತೆ ಒಟ್ಟು 1,347 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಘಟಿಕೋತ್ಸವಕ್ಕೆ 5 ಸಾವಿರಕ್ಕೂ ಹೆಚ್ಚು ಆಸನ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಡಾ. ಅಶೋಕ್ ಮೆಹ್ತಾ, ಸಲಹೆಗಾರ ಡಾ. ವಿವೇಕ್ ವೀರಯ್ಯ, ಪರೀಕ್ಷಾಂಗ ನಿಯಂತ್ರಕ ಡಾ. ಸುನೀಲ್ ಕೆ., ಘಟಿಕೋತ್ಸವ ಸಂಯೋಜಕ ಡಾ. ಸುದೀಪ್ ಕುಮಾರ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
