ತುಮಕೂರು: ಕಳೆದ ಡಿಸೆಂಬರ್ ಮಾಹೆಯಲ್ಲಿ ಲೋಕ್ ಅದಾಲತ್ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 1,08,407 ಪ್ರಕರಣಗಳಲ್ಲಿ 16,614 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು 31,13,664 ಪ್ರಕರಣಗಳ ವಿಲೇವಾರಿ ಸೇರಿದಂತೆ ಒಟ್ಟು 31,30,278 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಹೇಳಿದರು.
ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಮಾರ್ಚ್ 14ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ(ಲೋಕ್ ಅದಾಲತ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಈ ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಜನತಾ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ಭೂಸ್ವಾಧೀನ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜನತಾ ನ್ಯಾಯಾಲಯಗಳಲ್ಲಿ ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಭಾಗವಹಿಸಬಹುದು. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ(ವ್ಯಾಜ್ಯಪೂರ್ವ) ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಕಕ್ಷಿದಾರರಿಗೆ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಜನತಾ ನ್ಯಾಯಾಲಯವು ವಿಶೇಷ ಅವಕಾಶವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ನೂರುನ್ನೀಸರವರು ಮಾತನಾಡಿ, ಲೋಕ್ ಅದಾಲತ್ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮಾರ್ಚ್ 14ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಿಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ:0816-2255133 ಮತ್ತು ಮೊ.ಸಂ.9141193959 ಹಾಗೂ ಕಾನೂನು ಸಹಾಯಕ್ಕಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ: 15100ಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
– ಕೆ.ಬಿ.ಚಂದ್ರಚೂಡ
