ತುಮಕೂರು: ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ 24*7 ನಿಗಾವಹಿಸಲಿದೆ ಎಂದು ತಿಳಿಸಿದರು.
ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜûನ್ ಪ್ಲಾಂಟ್, ವೆಂಟಿಲೇಟರ್, ಆಂಬುಲೆನ್ಸ್ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು.
