ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಕೇವಲ ಪಠ್ಯವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ. ಇಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ವಿ-ಟೆಕ್ ಸಲ್ಯೂಷನ್ಸ್ನ ವ್ಯವಸ್ಥಾಪಕ ನಿರ್ದೇಶಕಿ ನಾಗಪ್ರಿಯ.ಕೆ.ಜೆ. ಹೇಳಿದರು.
ನಗರದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ವತಿಯಿಂದ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿದ್ಯಾನಿಧಿ ನ್ಯೂ ಬ್ಲಾಕ್ನಲ್ಲಿ ಶನಿವಾರ ಆಯೋಜಿಸಿದ್ದ ‘ಅಭಿನವ ಸಿರಿ’ ಎಂಬ ವಿದ್ಯಾರ್ಥಿ ಸಮಾಗಮ ಮತ್ತು ಸಾಂಸ್ಕೃತಿಕ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಕಾರ್ಪೊರೇಟ್ ಜಗತ್ತಿನಲ್ಲಿ ಕೇವಲ ಪದವಿ ಪ್ರಮಾಣಪತ್ರಗಳಿದ್ದರೆ ಸಾಲದು, ವ್ಯಕ್ತಿತ್ವದಲ್ಲಿ ನಾಯಕತ್ವದ ಗುಣಗಳಿರಬೇಕು. ಅಭಿನವ ಸಿರಿಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿವೆ. ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮರೆಯದೆ, ಆಧುನಿಕ ತಂತ್ರಜ್ಞಾನದೊAದಿಗೆ ಹೆಜ್ಜೆ ಹಾಕಿದಾಗ ಮಾತ್ರ ಒಬ್ಬ ಪರಿಪೂರ್ಣ ವೃತ್ತಿಪರ ವ್ಯಕ್ತಿಯಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಪ್ರಸನ್ನ ಕುಮಾರ್ ಟಿ.ಎಂ. ಅವರು ಮಾತನಾಡಿ, ನಿರ್ವಹಣಾ ಶಿಕ್ಷಣ ಎಂದರೆ ಕೇವಲ ತರಗತಿಯ ಕೋಣೆಯಲ್ಲಿ ಕುಳಿತು ಕಲಿಯುವುದಲ್ಲ. ಗುಂಪು ಚಟುವಟಿಕೆಗಳು, ಸಾಂಸ್ಕೃತಿಕ ಒಕ್ಕೂಟಗಳು ವಿದ್ಯಾರ್ಥಿಗಳಲ್ಲಿ ಪರಸ್ಪರ ಸಹಕಾರ ಮತ್ತು ಸಮಯ ಪ್ರಜ್ಞೆಯನ್ನು ಬೆಳೆಸುತ್ತವೆ. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ನಮ್ಮ ಮಣ್ಣಿನ ಸಂಸ್ಕೃತಿಯನ್ನು ಪರಿಚಯಿಸುವ ಸಂಸ್ಕೃತಿ ಸಂವಹನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ತಮ್ಮ ಸಂವಹನ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
