ತುಮಕೂರು, ಜೂ. 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ದೊಡ್ಡನಾರವಂಗಲ ವಲಯದ ಜಿ. ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಓಬಳಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವನಜಾಕ್ಷಮ್ಮ ಉದ್ಘಾಟಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಸಂದೇಶ್ ಪಿ.ಬಿ., ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ “ಭೂಮಿ ತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ” ಎಂಬ ಅಭಿಯಾನದಡಿ ರಾಜ್ಯಾದ್ಯಂತ ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಹಣ್ಣು-ಹಂಪಲು ಸಸಿಗಳನ್ನು ನೆಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿದ್ದಗಂಗಣ್ಣ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಸಿದ್ದಗಂಗಮ್ಮ, ರವಿಕುಮಾರ್, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಶಿಕ್ಷಕರಾದ ಶಂಕರ್, ನಾಗರಾಜು, ಕೃಷಿ ಮೇಲ್ವಿಚಾರಕ ರಾಘವೇಂದ್ರ ಎನ್., ಸೇವಾ ಪ್ರತಿನಿಧಿ ರಾಜೇಶ್ವರಿ, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
– ಚಂದ್ರಚೂಡ ಕೆ.ಬಿ.
