ತುಮಕೂರು- ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಆಸ್ತಿಯಾಗಬೇಕು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ ಕರೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು .
ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ. ಲಕ್ಷ, ಕೋಟಿ ಇದ್ದರೂ ಆರೋಗ್ಯ ಸಂಪಾದನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಸಹ ಕ್ರೀಡೆಯಲ್ಲಿ ತೊಡಗಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದು ಸಲಹೆ ನೀಡಿದರು.
ಪ್ರಸ್ತುತ ದಿನಗಳಲ್ಲಿ ದೇಶೀಯ ಕ್ರೀಡೆಗಳ ಬಗ್ಗೆ ಯುವಕರ ಆಸಕ್ತಿ ಕಡಿಮೆಯಾಗಿದೆ. ಮೊಬೈಲ್ ವ್ಯಾಮೋಹ ಜಾಸ್ತಿಯಾಗಿದೆ. ಇದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವಂತರಾಗಲು ಸಾಧ್ಯವಿಲ್ಲ. ಇದನ್ನು ಪ್ರತಿಯೊಬ್ಬರೂ ಅರಿತು ಪ್ರತಿದಿನ ಬೆಳಿಗ್ಗೆ 1 ಗಂಟೆ ಮತ್ತು ಸಂಜೆ 1 ಗಂಟೆಯಲ್ಲಿ ಕ್ರೀಡೆಯಲ್ಲಿ ಭಾಗಿಯಾಗಿ ಎಂದು ಯುವಕರಿಗೆ ತಿಳಿಸಿದರು.

ಖೋಖೋ ರಾಷ್ಟ್ರೀಯ ಕ್ರೀಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ದೇಶೀಯ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. ಇದೇ ರೀತಿ ಯುವಕರು ಸಹ ಗ್ರಾಮೀಣ ಹಾಗೂ ದೇಶೀಯ ಕ್ರೀಡೆಗಳಾದ ಕಬಡ್ಡಿ, ಖೋಖೋ, ವಾಲಿಬಾಲ್ ಕ್ರೀಡೆಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದ ಅವರು, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ಬಹಳ ಮುಖ್ಯ. ಈ ನಿಟ್ಟೀನಲ್ಲಿ ವಿವೇಕಾನಂದ ಕ್ರೀಡಾ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ರಾಜ್ಯ ಖೋಖೋ ಫೆಡರೇಷನ್ ಅಧ್ಯಕ್ಷ ಲೋಕೇಶ್ವರ್ ಅವರು ವಿಜೇತ ತಂಡಗಳು ಹಾಗೂ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಉದ್ಯೋಗ ನೇಮಕಾತಿಯಲ್ಲಿ ಶೇ. 3 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.
ಇದನ್ನು ಓದಿ: ತುಮಕೂರು : ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ
ಖೋಖೋ ಮೊದಲಿನಂತೆ ಮಣ್ಣಿನ ಆಟವಾಗಿ ಇಲ್ಲ. ಕ್ರೀಡೆಯ ಲಾಭಾಂಶಗಳು ಜಾಸ್ತಿಯಾಗಿ ಬೆಳೆದಿವೆ. ಅಲ್ಟಿಮೆಟ್ ಖೋಖೋ ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳು 15 ರಿಂದ 20 ಲಕ್ಷದ ವರೆಗೆ ಹಣ ಗಳಿಸಲು ಅವಕಾಶ ಇದೆ. ಇದರಿಂದ ಮಧ್ಯಮ ವರ್ಗದ ಮಕ್ಕಳಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು.ವಿವೇಕಾನಂದ ಕ್ರೀಡಾ ಸಂಸ್ಥೆಯ ಪದಾಧಿಕಾರಿಗಳು ರಾಜ್ಯಮಟ್ಟದ ಖೋಖೋ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಆಯೋಜಿಸಿ ಖೋಖೋ ಕ್ರೀಡೆಗೆ ಒತ್ತು ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರ್, ರಾಮಕೃಷ್ಣಯ್ಯ, ಉಪಾಧ್ಯಕ್ಷ ಎನ್.ನರಸಿಂಹರಾಜು,ಧನಿಯಾಕುಮಾರ್, ವಿನಯ್, ಪ್ರೀತಂ, ಎಸ್.ಎನ್.ಹರೀಶ್, ರವೀಶ್, ಪ್ರದೀಪ್ಕುಮಾರ್ ಮತ್ತಿತರರು ಭಾಗವಹಿಸಿದ್ದರು.
– ಕೆ.ಬಿ.ಚಂದ್ರಚೂಡ
