ಕೊರಟಗೆರೆ:- ತಾಲ್ಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಈಶ್ವರಪ್ಪ ಅವರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿನಯ್ ಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಸಂಘದ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿನಯ್ ಕುಮಾರ್ ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ರೈತ ಬಾಂಧವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ ಎಂದರು.
ಕೊರಟಗೆರೆ ತಾಲ್ಲೂಕಿನ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಮತ್ತು ಉತ್ತಮ ಬೆಲೆ ದೊರಕಿಸಿಕೊಡುವುದು, ಕೃಷಿ ಉತ್ಪನ್ನಗಳ ಮಾರಾಟ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಸಹಕಾರ ಸಂಘವನ್ನು ಮತ್ತಷ್ಟು ಬಲಪಡಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿರಲಿದೆ. ರೈತರು, ಸದಸ್ಯರು ಮತ್ತು ನಿರ್ದೇಶಕರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಕೃಷಿಕರ ಹಿತಾಸಕ್ತಿ ಕಾಪಾಡುವುದು, ಕೃಷಿ ಉತ್ಪನ್ನಗಳ ಮಾರಾಟ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ. ಅವರ ಆಯ್ಕೆಯಿಂದ ಸಂಘದ ಆಡಳಿತದಲ್ಲಿ ಹೊಸ ನಿರೀಕ್ಷೆಗಳು ಮೂಡಿದ್ದು, ರೈತರು ಹಾಗೂ ಸಹಕಾರ ಕ್ಷೇತ್ರದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಭಾರ ಅಧ್ಯಕ್ಷೆ ಭಾಗ್ಯಮ್ಮ ಮಹೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ನಿರ್ದೇಶಕರಾದ ಎಸ್. ಹನುಮಾನ್, ರಾಜಶೇಖರಯ್ಯ, ಜಯರಾಮು, ಜಿ.ಕೆ. ಕುಮಾರ್, ಕೆ.ವಿ. ಮಂಜುನಾಥ್, ಕೆ.ವಿ. ಪುರುಷೋತ್ತಮ್, ಸಿದ್ದಲಿಂಗಪ್ಪ, ಹನುಮಂತರಾಯ, ಕೆ. ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಕೆ.ಆರ್. ಓಬಳರಾಜು, ಎಲ್. ರಾಜಣ್ಣ, ಕಾರ್ ಮಹೇಶ್, ನಟೇಶ್, ಕೆ.ಬಿ. ಲೋಕೇಶ್ ಸೇರಿದಂತೆ ಸಂಘದ ನಿರ್ದೇಶಕರು, ಮುಖಂಡರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
